ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ಮೌಲ್ಯಾಧಾರಿತ ಕಾಲಾತೀತ ಹಾಗೂ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದು, ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ಆಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಕೇಂದ್ರ ಶಿಕ್ಷಣ ಸಚಿವರಿಗೆ ಮನವಿ ಮಾಡಿರುವ ಬಗ್ಗೆ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಕೇಂದ್ರ ಸರ್ಕಾರದ ಗೌರವಾನ್ವಿತ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ ಎಂದಿದ್ದಾರೆ.

ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ ಮತ್ತು ನಮ್ಮ ಯುವಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಅತ್ಯಂತ ಶ್ರೇಷ್ಠ, ಮಾನವೀಯತೆಯ ಭಾರತೀಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ ಎಂದು ನಾನು ಬಲವಾಗಿ ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *