ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 101 ರನ್‌ಗಳ ಭಾರಿ ಜಯ ಸಾಧಿಸಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವನ್ನು ಕೇವಲ 74 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ತಂಡ ಹೊಸ ದಾಖಲೆ ಬರೆಯಿತು. ಹಾರ್ದಿಕ್ ಪಾಂಡ್ಯ ಅರ್ಧಶತಕ ಹಾಗೂ 1 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಆರಂಭ ಪಡೆದುಕೊಂಡಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಕೇವಲ 74 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ 101 ರನ್‌ಗಳ ಭಾರಿ ಅಂತರದ ಜಯ ಸಾಧಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಬೇಡದ ದಾಖಲೆಗೆ ಕೊರಳೊಡ್ಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 175 ರನ್ ಕಲೆಹಾಕಿತು. ಬ್ಯಾಟಿಂಗ್ನಲ್ಲಿ ಹಾರ್ದಿಕ್ ಪಾಂಡ್ಯ ಅರ್ಧಶತಕದ ಇನ್ನಿಂಗ್ಸ್ ಅಡಿದರೆ, ಬೌಲಿಂಗ್ನಲ್ಲೂ 1 ವಿಕೆಟ್ ಪಡೆದರು.
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್ ಮಾಡಿದ ಭಾರತದ ಪರ ಹಾರ್ದಿಕ್ ಪಾಂಡ್ಯ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾರ್ದಿಕ್ 28 ಎಸೆತಗಳಲ್ಲಿ ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 59 ರನ್ ಗಳಿಸಿದರು. ತಿಲಕ್ ವರ್ಮಾ 26 ಮತ್ತು ಅಕ್ಷರ್ ಪಟೇಲ್ 23 ರನ್‌ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ ಪರ ಯಾವ ಬ್ಯಾಟ್ಸ್ಮನ್ ಕೂಡ ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಆಡಲಿಲ್ಲ. ಇತ್ತ ದಕ್ಷಿಣ ಆಫ್ರಿಕಾ ಪರ ಬೌಲಿಂಗ್ನಲ್ಲಿ ಮಿಂಚಿದ ಲುಂಗಿ ಎನ್‌ಗಿಡಿ ಮೂರು ವಿಕೆಟ್ ಪಡೆದರೆ, ಲುಥೋ ಸಿಪಾಮ್ಲಾ ಎರಡು ವಿಕೆಟ್ ಪಡೆದರು.
ಇದಕ್ಕೆ ಉತ್ತರವಾಗಿ 176 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿತು. ತಂಡದ ಯಾವ ಬ್ಯಾಟ್ಸ್ಮನ್ಗೂ ಟೀಂ ಇಂಡಿಯಾ ಬೌಲಿಂಗ್ ಮುಂದೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಆಫ್ರಿಕಾ ಪರ ಡೆವಾಲ್ಡ್ ಬ್ರೆವಿಸ್ 22 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ತಂಡದ ಉಳಿದ ಏಳು ಆಟಗಾರರು 10 ರನ್ ಗಳಿಸಲು ಸಹ ವಿಫಲರಾದರು. ಭಾರತದ ಪರ ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.
ಇನ್ನು ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 101 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹಾಗೆಯೇ ಟೀಂ ಇಂಡಿಯಾ 100 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಅಂತರದಿಂದ ಟಿ20 ಪಂದ್ಯ ಗೆದ್ದಿರುವುದು ಇದು ಒಂಬತ್ತನೇ ಬಾರಿ. ಇದು ಮಾತ್ರವಲ್ಲದೆ ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 100 ಸಿಕ್ಸರ್ಗಳ ಮೈಲಿಗಲ್ಲು ದಾಟಿದರೆ, ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 100 ವಿಕೆಟ್ಗಳನ್ನು ಪೂರೈಸಿದರು. ಹಾಗೆಯೇ ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದ ಅತಿ ಕಿರಿಯ ಬ್ಯಾಟ್ಸ್ಮನ್ ಎಂಬ ದಾಖಲೆ ನಿರ್ಮಿಸಿದರು.

